
ಕಡಬ: ಕಡಬ ಸಮೀಪ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲಿನ ಸರಕಾರಿ ಜಮೀನಿನಲ್ಲಿ ಹಲವು ವರ್ಷಗಳಿಂದ ವಾಸ್ತವ್ಯವಿದ್ದ ರಾಧಮ್ಮ ಮತ್ತು ಮುತ್ತುಸ್ವಾಮಿ ಎಂಬ ವೃದ್ಧ ದಂಪತಿಯ ಗುಡಿಸಲನ್ನು ನ್ಯಾಯಾಲಯದ ಆದೇಶ ಎನ್ನುವ ಕಾರಣ ಮುಂದಿಟ್ಟುಕೊಂಡು ಕಂದಾಯ ಅಧಿಕಾರಿಗಳು ತೆರವುಗೊಳಿಸಿದ್ದು, ದಂಪತಿ ಬೀದಿಗೆ ಬೀಳುವಂತಾಗಿದೆ.



ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆ ವೇಳೆ ಕಡಬ ಕಂದಾಯ ನಿರೀಕ್ಷಕ ಪೃಥ್ವಿರಾಜ್, ಕಡಬ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ಉಪಸ್ಥಿತರಿದ್ದರು. ಉಪ್ಪಿನಂಗಡಿ ಪೊಲೀಸರು ಬಂದೋಬಸ್ತ್ ಒದಗಿಸಿದ್ದರು.
ಮೂಲತಃ ಚಿತ್ರದುರ್ಗ ಜಿಲ್ಲೆಯ ಹಟ್ಟಿ ನಿವಾಸಿಗಳಾಗಿದ್ದ ಈ ದಂಪತಿ ಕೂಲಿ ಕೆಲಸಕ್ಕಾಗಿ ಕರಾವಳಿಗೆ ಆಗಮಿಸಿದವರು. ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಕಳೆದ 6 ವರ್ಷಗಳಿಂದ ವಾಸಿಸುತ್ತಿದ್ದರು. ದಂಪತಿಗೆ ಯಾವುದೇ ಪಿತ್ರಾರ್ಜಿತ ಆಸ್ತಿ ಇರಲಿಲ್ಲ. ಹೀಗಾಗಿ ಕಾಪಿನಬಾಗಿಲು ಎಂಬಲ್ಲಿನ ಸರಕಾರಿ ಜಾಗದಲ್ಲಿ ಸಣ್ಣ ಮನೆ ಕಟ್ಟಿಕೊಂಡಿದ್ದರು. ದಂಪತಿ ನಿತ್ಯ ಕೂಲಿ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದ್ದರು.


ಈ ದಂಪತಿ ಸರಕಾರಿ ಜಾಗದಲ್ಲಿ ಮನೆ ನಿರ್ಮಿಸಿರುವ ಕಾರಣ ಇದರ ವಿರುದ್ಧ ಬೆಳ್ತಂಗಡಿ ತಾಲೂಕಿನ ಅಶೋಕ್ ಆಚಾರ್ಯ ಎಂಬವರು ಹೈಕೋರ್ಟ್ನಲ್ಲಿ ದಾವೆ ಹೂಡಿದ್ದರು. ಈ ಹಿನ್ನೆಲೆಯಲ್ಲಿ ಸರಕಾರಿ ಜಾಗ ತೆರವುಗೊಳಿಸಲು ಹೈಕೋರ್ಟ್ ಸೂಚನೆ ನೀಡಿದ್ದರಿಂದ ಕಳೆದ ಫೆಬ್ರವರಿಯಲ್ಲೇ ಮನೆ ತೆರವಿಗೆ ಅಧಿಕಾರಿಗಳು ಮುಂದಾಗಿದ್ದರು. ಆದರೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮನೆ ಕೆಡವದೆ ವಾಪಸ್ಸಾಗಿದ್ದರು. ದಿಢೀರ್ ಬುಧವಾರ ಆಗಮಿಸಿದ ಅಧಿಕಾರಿಗಳು ಜೆಸಿಬಿ ಯಂತ್ರದ ಬಳಸಿ ಮನೆಯ ಸಾಮಗ್ರಿಗಳನ್ನೆಲ್ಲ ಹೊರಗಿಟ್ಟು ಮನೆಯನ್ನು ಕೆಡವಿ ಹಾಕಿದ್ದಾರೆ.
