
ಧರ್ಮಸ್ಥಳ: ನೂರಾರು ಶವಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಹರ್ಷೇಂದ್ರ ಕುಮಾರ್ ಅವರ ಬಗ್ಗೆ ಯಾವುದೇ ಸುದ್ದಿ ಪ್ರಸಾರ/ಪ್ರಕಟ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ಹೈಕೋರ್ಟ್ ವಜಾಗೊಳಿಸಿದೆ.


ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಪ್ರತಿಬಂಧಕಾದೇಶ ಪ್ರಶ್ನಿಸಿ ದಕ್ಷಿಣ ಕನ್ನಡದ ‘ಕುಡ್ಲ ರ್ಯಾಂಪೇಜ್’ ಯೂಟ್ಯೂಬ್ ಚಾನಲ್ನ ಪ್ರಧಾನ ಸಂಪಾದಕ ಅಜಯ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಯನ್ನು ಭಾಗಶಃ ಪುರಸ್ಕರಿಸಿದೆ.
ಕುಡ್ಲ ರ್ಯಾಂಪೇಜ್ ಪ್ರಧಾನ ಸಂಪಾದಕ ಅಜಯ್ ಸಲ್ಲಿಸಿರುವ ಅರ್ಜಿಯನ್ನು ಭಾಗಶಃ ಪುರಸ್ಕರಿಸಲಾಗಿದೆ. 2025ರ ಜುಲೈ 8ರಂದು ವಿಚಾರಣಾ ನ್ಯಾಯಾಲಯ ಹೊರಡಿಸಿರುವ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ವಜಾಗೊಳಿಸಲಾಗಿದೆ. ಮಧ್ಯಂತರ ಅರ್ಜಿಯನ್ನು ಹೊಸದಾಗಿ ಪರಿಗಣಿಸಲು ಪ್ರಕರಣವನ್ನು ಸಕ್ಷಮ ನ್ಯಾಯಾಲಯಕ್ಕೆ ವಾಪಸ್ ಕಳುಹಿಸಲಾಗುತ್ತಿದೆ. ವಿಚಾರಣಾ ನ್ಯಾಯಾಲಯವು ಈ ಆದೇಶದಲ್ಲಿ ಮಾಡಿರುವ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಸಕ್ಷಮ ನ್ಯಾಯಾಲಯ ಮಧ್ಯಂತರ ಅರ್ಜಿಯನ್ನು ತುರ್ತಾಗಿ ನಿರ್ಧರಿಸಬೇಕು. ಸಿವಿಲ್ ದಾವೆ, ಕ್ರಿಮಿನಲ್ ಪ್ರಕ್ರಿಯೆ, ಆರೋಪ, ಪ್ರತ್ಯಾರೋಪದ ಮೇಲೆ ಈ ನ್ಯಾಯಾಲಯವು ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ. ಆದೇಶದಲ್ಲಿ ಪರಿಗಣಿಸಿರುವ ಒಂದು ಅಂಶವನ್ನು ಹೊರತುಪಡಿಸಿ ಪಕ್ಷಕಾರರ ನಡುವೆ ಎಲ್ಲ ವಾದಗಳನ್ನು ಮುಕ್ತವಾಗಿರಿಸಲಾಗಿದೆ ಎಂದು ನ್ಯಾಯಾಲಯ ಆದೇಶಿಸಿದೆ.


ಈ ಆದೇಶದಲ್ಲಿ ಉಲ್ಲೇಖಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಅರ್ಜಿದಾರರು ಮತ್ತು ಇತರ ಎಲ್ಲ ಪಕ್ಷಕಾರರು ಸಕ್ಷಮ ನ್ಯಾಯಾಲಯಕ್ಕೆ ಆದೇಶ ಮಾಡಲು ಎಲ್ಲ ರೀತಿಯ ಸಹಕಾರ ನೀಡಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ. ವಿಸ್ತೃತ ಆದೇಶ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.
