
Read Time:1 Minute, 19 Second
ಉಡುಪಿ: ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಘಟನೆ ಮಲ್ಪೆ ಬಂದರಿನಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.


ಮೂರು ದಿನಗಳ ಹಿಂದೆ ನಡೆದಿದೆ ಎನ್ನಲಾದ ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ಹಲ್ಲೆ ನಡೆಸಿದವರ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಹಿಳೆ ಒಂದು ಬುಟ್ಟಿ ಮೀನು ಕದ್ದಿರುವುದಾಗಿ ಆರೋಪಿಸಲಾಗಿದೆ. ಬಳಿಕ ಆಕೆಯನ್ನು ಹಿಡಿದು ಮಹಿಳೆಯೊಬ್ಬರು ಕಪಾಳಕ್ಕೆ ಹೊಡೆಯುವ ದೃಶ್ಯಗಳು ವಿಡಿಯೋದಲ್ಲಿ ಕಂಡು ಬಂದಿವೆ. ಬಳಿಕ ಆಕೆಯನ್ನು ಮರಕ್ಕೆ ಕಟ್ಟಿ ಹಾಕಿ ವ್ಯಕ್ತಿಯೊಬ್ಬ ಅವಾಚ್ಯ ಶಬ್ದಗಳಿಂದ ಬೈದು ಕಪಾಳಕ್ಕೆ ಎರಡು ಬಾರಿ ಹಲ್ಲೆ ನಡೆಸಿರುವುದಾಗಿ ವಿಡಿಯೋದಲ್ಲಿದೆ.
ಇದೀಗ ಈ ವಿಡಿಯೋ ವೈರಲ್ ಆಗಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮಲ್ಪೆ ಪೊಲೀಸರು ತನಿಖೆ ನಡೆಸುತಿದ್ದಾರೆ. ಅಲ್ಲದೆ ಈ ಕುರಿತು ಪ್ರಕರಣ ದಾಖಲಿಸಿಕೊಳ್ಳುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

