
ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ಬಗ್ಗೆ ಕರ್ನಾಟಕದಲ್ಲಿ ಚರ್ಚೆಗಳು ನಡೆಯುತ್ತಿದೆ. ರಾಜ್ಯ ಸರ್ಕಾರ ಈ ಕುರಿತ ತೀರ್ಮಾನಕ್ಕೆ ತಾತ್ಕಾಲಿಕ ತಡೆ ನೀಡಿದೆ.


ಈ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಕರ್ನಾಟಕ ಹೈಕೋರ್ಟ್‌ಗೆ ಸಹ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು.
ಕರ್ನಾಟಕದಲ್ಲಿ ಕೈಗಾರಿಕೆಗಳು-ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳ ಉದ್ಯೋಗಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ (ಕನ್ನಡಿಗರಿಗೆ) ಉದ್ಯೋಗ ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಪ್ರಶ್ನಿಸಿ ಬಿಲೇಕಹಳ್ಳಿಯ ಸೋಮೇಶ್ವರ ಲೇಔಟ್‌ನ ಲೆಕ್ಕ ಪರಿಶೋಧಕಿ ಆರ್. ಅರ್ಮಿತಲಕ್ಷ್ಮೀ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದರು.


ಮಂಗಳವಾರ ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ ಅರ್ಜಿಯ ವಿಚಾರಣೆ ನಡೆಸಿತು. ರಾಜ್ಯದಲ್ಲಿ ಈ ಕುರಿತು ಇನ್ನೂ ಕಾಯ್ದೆ ಆಗಿಲ್ಲ, ಮಸೂದೆ ಮಾತ್ರ ಇದೆ. ಮಸೂದೆಯನ್ನು ರದ್ದುಗೊಳಿಸಲು ಆಗದು ಎಂದು ಹೇಳಿದ ಹೈಕೋರ್ಟ್, ಪಿಐಎಲ್ ವಜಾಗೊಳಿಸಿ ಆದೇಶಿಸಿತು.

ಅರ್ಜಿದಾರರ ವಾದ: ಅರ್ಜಿಯ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಈ ಮಾದರಿಯ ಕಾನೂನನ್ನು ಹರ್ಯಾಣ ಸರ್ಕಾರ ರಚನೆ ಮಾಡಿದೆ, ಪಂಜಾಬ್-ಹರ್ಯಾಣ ಹೈಕೋರ್ಟ್ ಈ ಕಾನೂನು ರದ್ದುಪಡಿಸಿತ್ತು ಎಂದರು.
ನ್ಯಾಯಪೀಠ ಅರ್ಜಿಯನ್ನು ಪರಿಶೀಲನೆ ಮಾಡಿ ಹರ್ಯಾಣ ಸರ್ಕಾರ ರಾಜ್ಯದ ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಮೀಸಲಾತಿ ಕಲ್ಪಿಸಿ ಕಾಯ್ದೆಯನ್ನು ರೂಪಿಸಿತ್ತು. ಕರ್ನಾಟಕದಲ್ಲಿ ವಿಧೇಯಕ ಕಾಯ್ದೆ ರೂಪದಲ್ಲಿ ಜಾರಿಗೆ ಬಂದಿಲ್ಲ. ಸದ್ಯ ಕರಡು ಸ್ವರೂಪದಲ್ಲಿದ್ದು, ಕಾನೂನು ಮಾನ್ಯತೆ ಪಡೆದಿಲ್ಲ ಎಂದು ಹೇಳಿತು. ಅರ್ಜಿಯನ್ನು ವಜಾಗೊಳಿಸಿತು.