
ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.15ರಿಂದ ಏಕಬಳಕೆಯ ಪ್ಲಾಸ್ಟಿಕ್ ಚೀಲಗಳ ಬಳಕೆ ಸಂಪೂರ್ಣವಾಗಿ ರದ್ದಾಗಲಿದೆ.


ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲಾ ದೇವಸ್ಥಾನಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಉತ್ಪಾದನೆ, ಸಂಗ್ರಹ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಈ ಪ್ರಕಾರ ಸುಬ್ರಹ್ಮಣ್ಯ ಕ್ಷೇತ್ರದಲ್ಲೂ ಪ್ಲಾಸ್ಟಿಕ್ ಬಳಕೆ ನಿಷೇಧವಾಗಲಿದೆ.
ಪ್ಲಾಸ್ಟಿಕ್‌ನ ನೀರಿನ ಬಾಟಲಿ ಅಂತೆಯೇ ಏಕಬಳಕೆಯ ತೆಳು ಪ್ಲಾಸ್ಟಿಕ್ ಚೀಲಗಳು ಸೇರಿದಂತೆ ಎಲ್ಲ ಬಳಸಿ ಎಸೆಯುವ ಪ್ಲಾಸ್ಟಿಕ್ ಉತ್ಪನ್ನಗಳು ನಿಷೇಧವಾಗಲಿವೆ. ಅಂಗಡಿಗಳಲ್ಲೂ ಏಕಬಳಕೆಯ ಪ್ಲಾಸ್ಟಿಕ್ ಚೀಲ ಗ್ರಾಹಕರಿಗೆ ನೀಡುವಂತಿಲ್ಲ.


ದೇಗುಲದ ಪರಿಸರದಲ್ಲಿರುವ ಎಲ್ಲ ಅಂಗಡಿ, ಹೋಟೆಲ್ ಮತ್ತಿತರ ವಾಣಿಜ್ಯ ಮಳಿಗೆಗಳಿಗೆ ಈಗಾಗಲೇ ಏಕಬಳಕೆ ಪ್ಲಾಸ್ಟಿಕ್ ಚೀಲಗಳನ್ನು ನೀಡದಂತೆ ಮತ್ತು ಸಂಗ್ರಹಿಸಿ ಇಡದಂತೆ ನೋಟಿಸ್ ನೀಡಲಾಗಿದೆ. ಕ್ಷೇತ್ರದ 3 ಕಿ.ಮೀ. ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ ನಿಯಮ ಜಾರಿಗೆ ಬರಲಿದೆ. ನಿಷೇಧಿತ ಪ್ಲಾಸ್ಟಿಕ್ ಬಳಸುವುದು ಕಂಡುಬಂದರೆ ಜುಲ್ಮಾನೆ ಸಹಿತ ಕಠಿಣ ದಂಡನೆಗೆ ಕಾನೂನಿನಲ್ಲಿ ಅವಕಾಶವಿದೆ ಎಂದು ನೋಟಿಸಿನಲ್ಲಿ ತಿಳಿಸಲಾಗಿದೆ.
