
ಮಂಗಳೂರು: ಹದಿನೈದು (2010ರ ಮೇ 22) ವರ್ಷಗಳ ಹಿಂದೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸಂಭವಿಸಿದ ಭೀಕರ ವಿಮಾನ ದುರಂತಲ್ಲಿ ಮಡಿದವರಿಗೆ ದ.ಕ. ಜಿಲ್ಲಾಡಳಿತದಿಂದ ಇಂದು ಬೆಳಗ್ಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.


ಈ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಯಾಣಿಕರ ಸ್ಮರಣಾರ್ಥ ತಣ್ಣೀರುಬಾವಿ ಬಳಿಯ ನಿರ್ಮಿಸಲಾಗಿರುವ ಸ್ಮಾರಕದಲ್ಲಿ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಪ್ರಭಾರ ಜಿಲ್ಲಾಧಿಕಾರಿಯಾಗಿರುವ ಜಿಪಂ ಸಿಇಒ ಡಾ.ಆನಂದ್, ಮಂಗಳೂರು ಮನಪಾ ಆಯುಕ್ತ ರವಿಚಂದ್ರ ನಾಯಕ್, ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕ ಡಾ.ಅರುಣ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದು ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.

2010ರ ಮೇ 22ರಂದು ಬೆಳಗ್ಗೆ 6:20ಕ್ಕೆ ದುಬೈನಿಂದ ಆಗಮಿಸಿದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವು ಬಜ್ಪೆ ಕೆಂಜಾರಿನಲ್ಲಿರುವ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ಹಂತದಲ್ಲಿ ಅಪಘಾತಕ್ಕೀಡಾಗಿ ವಿಮಾನದಲ್ಲಿದ್ದ 166 ಮಂದಿಯ ಪೈಕಿ 158 ಮಂದಿ ಮೃತಪಟ್ಟಿದ್ದರು. 8 ಮಂದಿ ಬದುಕುಳಿದಿದ್ದರು. ಈ ದುರಂತದಲ್ಲಿ ಮೃತಪಟ್ಟವರಲ್ಲಿ ಹಲವರ ಮೃತದೇಹದ ಗುರುತು ಪತ್ತೆಯಾಗದೆ ಉಳಿದಿದ್ದು, ಅವುಗಳನ್ನು ಕೂಳೂರಿನ ಫಲ್ಗುಣಿ ನದಿ ಕಿನಾರೆಯಲ್ಲಿ ದಫನ ಮಾಡಲಾಗಿತ್ತು. ಅದೇ ಜಾಗದಲ್ಲಿ ಸಂತ್ರಸ್ತರ ನೆನಪಿನ ಪಾರ್ಕ್ ನಿರ್ಮಿಸಲಾಗಿದೆ.


