
Read Time:1 Minute, 18 Second
ಗಾಂಜಾ ಹಾಗೂ ಕತ್ತಿಯನ್ನು ಆಟೋ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.


ಕಡಬ ತಾಲೂಕಿನ ಸವಣೂರು ನಿವಾಸಿ ಪ್ರಸಾದ್ (35) ಬಂಧಿತ ಆರೋಪಿ. ಸವಣೂರು ಕಡೆಯಿಂದ ಪುತ್ತೂರು ಕಡೆಗೆ ಆಟೋ ರಿಕ್ಷಾದಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ, ಪುತ್ತೂರು ನಗರ ಠಾಣೆಯ ಉಪನಿರೀಕ್ಷಕ ಜನಾರ್ಧನ ಕೆ.ಎಂ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.
ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ 1 ಕೆಜಿಗಿಂತಲೂ ಹೆಚ್ಚು ಪ್ರಮಾಣದ ನಿಷೇಧಿತ ಮಾದಕ ವಸ್ತು ಗಾಂಜಾ ಹಾಗೂ ಸುಮಾರು 25 ಇಂಚು ಉದ್ದದ ಕತ್ತಿ ಪತ್ತೆಯಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 106/2025ರಂತೆ NDPS ಕಾಯ್ದೆಯ ಸೆಕ್ಷನ್ 8(c), 20(ii)(c) ಹಾಗೂ Indian Arms Act ಸೆಕ್ಷನ್ 25(1B)(b) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


